ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ಕನಿಷ್ಠ ಖಚಿತ ಪ್ರೋತ್ಸಾಹ ಧನ ಪರಿಷ್ಕರಣೆ ಮಾಡಲು ಸಮಿತಿ ರಚನೆ ಮಾಡುವಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಆದೇಶಿಸಿದ್ದಾರೆ.
ಬೆಂಗಳೂರು: ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ಕನಿಷ್ಠ ಖಚಿತ ಪ್ರೋತ್ಸಾಹ ಧನ ಪರಿಷ್ಕರಣೆ ಮಾಡಲು ಸಮಿತಿ ರಚನೆ ಮಾಡುವಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಆದೇಶಿಸಿದ್ದಾರೆ.
ಪ್ರೋತ್ಸಾಹ ಧನ ಪರಿಷ್ಕರಣೆ ಹಾಗೂ ಸೇವೆ ಖಾಯಂಗೊಳಿಸುವಂತೆ ಆಗ್ರಹಿಸಿ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಒಕ್ಕೂಟ ಈ ಹಿಂದೆ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ಮಾರ್ಗ ಕಂಡು ಹಿಡಿಯಲು ಇಂಧನ ಇಲಾಖೆ ಹಿರಿಯ ಅಧಿಕಾರಿ ನೇತೃತ್ವದಲ್ಲಿ ರಚಿಸಿದ್ದ ಸಮಿತಿ 12,000 ರೂ. ಮಾಸಿಕ ಕನಿಷ್ಠ ಖಚಿತ ಪ್ರೋತ್ಸಾಹ ನೀಡುವಂತೆ ಶಿಫಾರಸು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಕ್ರಮ ಕೈಗೊಳ್ಳಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಜೆಸ್ಕಾಂ ಜನರಲ್ ಮ್ಯಾನೇಜರ್, ಮೈಸೂರು ಕಾರ್ಯಪಾಲನಾ ವೃತ್ತದ ಅಧೀಕ್ಷಕ ಅಭಿಯಂತರು, ಹೆಸ್ಕಾಂ ತಾಂತ್ರಿಕ ನಿರ್ದೇಶಕರನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ.
ಆದರೆ ಸೇವಾ ಖಾಯಂ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ ಕಾನೂನು ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.