ನವದೆಹಲಿ: ರಾಹುಲ್ ಗಾಂಧಿ ಇಡಿ ತನಿಖೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷದ ಸಂಸದರು ಹಾಗೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಪಕ್ಷದ ಕಚೇರಿಯಲ್ಲಿಂದು ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಂಧಿತ ಕಾಂಗ್ರೆಸ್ ಮುಖಂಡರನ್ನು ಅಕ್ರಮವಾಗಿ ಇಟ್ಟುಕೊಳ್ಳಲಾಗಿದೆ. ಕೇಸ್ ಗಳನ್ನು ದಾಖಲಿಸಿಲ್ಲ, ನಮ್ಮ ಕೆಲವು ಮುಖಂಡರ ಪೆಕ್ಕೆಲುಬು ಮುರಿದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಈ ವಿಚಾರದ ಬಗ್ಗೆ ರಾಜ್ಯಸಭಾ ಸಭಾಪತಿ ಅವರಿಗೆ ಮನವಿ ಮಾಡಲಾಗುವುದು, ನಮ್ಮನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ಸದಸ್ಯರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯದ ಬಗ್ಗೆ ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ದೂರು ನೀಡಲಾಗುವುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದರು.
ಯಾವುದೇ ಲಿಖಿತ ಆದೇಶವಿಲ್ಲದಿದ್ದರೂ ಸಂಸದರನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಊಟ, ನೀರು ಕೂಡಾ ನೀಡುತ್ತಿಲ್ಲ, ನಮ್ಮನ್ನು ಬಂಧಿಸಿದ್ದೀರಾ ಎಂದು ಸಂಸದರು ಕೇಳಿದರೆ ಪೊಲೀಸರು ಯಾವುದೇ ಉತ್ತರ ನೀಡುತ್ತಿಲ್ಲ. ಇದು ಸಂಪೂರ್ಣವಾಗಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಪ್ರತಿಯೊಂದು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಚಿದಂಬರಂ ಆಕ್ರೋಶ ವ್ಯಕ್ತಪಡಿಸಿದರು.